Vishnuvardhan Memorial: ನಟ ದಿವಂಗತ ಡಾ. ವಿಷ್ಣುವರ್ಧನ್ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿ ಅವರ ಸ್ಮಾರಕ ನಿರ್ಮಾಣ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದಿವಂಗತ ಡಾ.ವಿಷ್ಣುವರ್ಧನ್ ಅವರ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿ ಅವರ ಸ್ಮಾರಕ ನಿರ್ಮಾಣ ಮಾಡಲು ೧೦ ಗುಂಟಾ ಜಾಗವನ್ನು ನೀಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಸಂಬಂಧ ವಿ.ಎಸ್.ಎಸ್ ಅಭಿಮಾನ್ ಡಾ. ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ ಅರವಿಂದ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಡಾ.ವಿಷ್ಣುವರ್ಧನ್‌ನವರು ಕನ್ನಡ ಚಿತ್ರರಂಗದ ಒಬ್ಬ ಮೇರು ನಟ. ಅವರು ಗಣನೀಯ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ.

ಜತೆಗೆ ಅವರನ್ನು ಆರಾಧಿಸುವವರು ಅನೇಕ ಮಂದಿ. ಹೀಗಾಗಿ ನಟ ಹುಟ್ಟಿದ ಹಾಗೂ ದೈವಾಧೀನರಾದ ದಿನದಂದು ಅವರಿಗೆ ಪೂಜೆ ಮಾಡುವ ಮೂಲಕ ಗೌರವ ಸಲ್ಲಿಸುವುದು ನಮ್ಮ ಅಭಿಲಾಷೆ .

ಇದನ್ನು ಪರಿಗಣಿಸಿ ಅವರ ಅಂತ್ಯಕ್ರಿಯೆ ನಡೆದ ಬೆಂಗಳೂರು ದಕ್ಷಿಣ ತಾಲೂಕು, ಕೆಂಗೇರಿ ಹೋಬಳಿ ಮೈಲಸಂದ್ರ ಗ್ರಾಮದ ಸ.ನಂ ೨೬ ರ ಅಭಿಯಾನ ಸ್ಟೂಡಿಯೋದವರಿಗೆ ಮಂಜೂರಾದ ೧೦ ಗುಂಟಾ ಜಾಗವನ್ನು ವಿಷ್ಣುವರ್ಧನ ಅವರ ಸ್ಮಾರಕ ನಿರ್ಮಾಣ ಮಾಡಲು ಮಂಜೂರು ಮಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ನ್ಯಾಯಪೀಠವನ್ನು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಯಿಸಿದ ನ್ಯಾಯಪೀಠ, ಈ ರೀತಿ ಸಿನಿಮಾ ತಾರೆಯರ ಸ್ಮಾರಕ ನಿರ್ಮಿಸುವಂತೆ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವುದು ಸೂಕ್ತವಲ್ಲ.

ಜತೆಗೆ ಇದರಲ್ಲಿ ಸಾರ್ವಜನಿಕ ಹಿತಾಸಕ್ತಿ ಅಡಗಿಲ್ಲ. ಬೇಕಿದ್ದಲ್ಲಿ ಸರ್ಕಾರ ಅಥವಾ ಸಂಬಂಧಪಟ್ಟ ಪ್ರಾಧಿಕಾರದ ಮೂಲಕ ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಿ ಎಂದು ಹೇಳಿ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

More News

You cannot copy content of this page