ಭದ್ರಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆ ಘೋಷಣೆಗೆ ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ: ಸಿಎಂ

ನವದೆಹಲಿ: ಡಿಸೆಂಬರ್ ೬ ರಂದು ನಡೆಯಲಿರುವ ಮಹತ್ವದ ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಕುರಿತು ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ, ಆರೋಗ್ಯ ಹಾಗೂ ಕಾನೂನು ಸಚಿವರನ್ನು ಭೇಟಿಯಾದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಕೃಷ್ಣಾ ಮೇಲ್ದಂಡೆ ಯೋಜನೆಯ ೨ ನೇ ನ್ಯಾಯಾಧಿಕರಣದ ಅಧಿಸೂಚನೆಯಲ್ಲಿ ನ್ಯಾಯಾಲಯದ ಆದೇಶದಂತೆ ಕೇಂದ್ರ ಸರ್ಕಾರ ತನ್ನ ನಿಲುವನ್ನು ಪ್ರಕಟಣೆ ಮಾಡಿ, ಟ್ರಿಬ್ಯುನಲ್‌ನ ಸಂಪೂರ್ಣ ವರದಿಯ ನಂತರ ಸುಪ್ರೀಂ ಕೋರ್ಟ್ ನ ತೀರ್ಪಿನ ಪರಿಪಾಲನೆಯಾಗಬೇಕು ಎನ್ನುವ ನಿಟ್ಟಿನಲ್ಲಿ ಕೇಂದ್ರದಿಂದ ಸೂಕ್ತ ನಿರ್ದೇಶನ ನೀಡಬೇಕೆಂದು ಮನವಿ ಮಾಡಲಾಗಿದೆ ಎಂದರು.


ಗೋದಾವರಿ , ಕಾವೇರಿ, ಕೃಷ್ಣಾ ಮಹಾನದಿ ಲಿಂಕ್ ಬಗ್ಗೆ ರಾಜ್ಯದ ಅಹವಾಲನ್ನು ಕೇಳದೇ ಡಿಪಿಆರ್ ಮಾಡಬಾರದು ಹಾಗೂ ರಾಜ್ಯದ ನೀರಿನ ಪಾಲು ಎಷ್ಟು ಎಂಬುದು ನಿಗದಿ ಆಗುವ ವರೆಗೆ ಯೋಜನೆಯ ಅನುಷ್ಠಾನಕ್ಕೆ ಅನುಮೋದನೆ ನೀಡಬಾರದು ಎನ್ನುವ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.
ಆರೋಗ್ಯ ಹಾಗೂ ರಸಗೊಬ್ಬರ ಮತ್ತು ರಾಸಾಯನಿಕ ಸಚಿವ ಮಾಂಡವೀಯ ಭೇಟಿ
ಕೋವಿಡ್ ನಿರ್ವಹಣೆ ಹಾಗೂ ಕೋವಿಡ್ ಹೊಸ ತಳಿಯ ಬಗ್ಗೆ ಕೇಂದ್ರ ಆರೋಗ್ಯ ಸಚಿವರೊಂದಿಗೆ ಚರ್ಚಿಸಲಾಗಿದೆ, ರಾಜ್ಯದಲ್ಲಿ ಕೋವಿಡ್ ನಿರ್ವಹಣೆ, ಲಸಿಕೆ ಅಭಿಯಾನದ ಬಗ್ಗೆ ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿ ಅದನ್ನು ಮುಂದುವರೆಸಬೇಕೆಂದು ತಿಳಿಸಿದ್ದಾರೆ ಎಂದು ಹೇಳಿದರು.


ರಾಜ್ಯದಲ್ಲಿ ಲಸಿಕೆ ದಾಸ್ತಾನು ಸಾಕಷ್ಟಿದೆ. ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ಕೇಂದ್ರ ಸರ್ಕಾರ ತಜ್ಞರೊಂದಿಗೆ ಚರ್ಚಿಸಿ ಸೂಕ್ತ ನಿರ್ದೇಶನ ನೀಡುತ್ತದೆ. ರಾಜ್ಯಕ್ಕೆ ಕೇರಳದಿಂದ ಬರುವ ಪ್ರಯಾಣಿಕರನ್ನು ನಿಯಂತ್ರಣ ಮಾಡಿದಂತೆಯೇ, ತಮಿಳುನಾಡಿನಿಂದ ಬರುವ ಪ್ರಯಾಣಿಕರ ಮೇಲೂ ನಿಗಾ ವಹಿಸಲು ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದರು.
ಹೆಚ್ಚುವರಿ ಡಿ ಎ ಪಿ ಗೆ ಮನವಿ
ರಾಜ್ಯಕ್ಕೆ ಹೆಚ್ಚುವರಿ ಡಿಎಪಿಗೆ ಕೇಂದ್ರ ರಸಗೊಬ್ಬರ ಸಚಿವರಿಗೆ ಬೇಡಿಕೆ ಸಲ್ಲಿಸಲಾಗಿದೆ. ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ರಾಜ್ಯಕ್ಕೆ ನಿಗದಿಯಾಗಿರುವ ೪೮ ಸಾವಿರ ಮೆ.ಟನ್ ಡಿಎಪಿಯನ್ನು ಸಂಪೂರ್ಣವಾಗಿ ಪೂರೈಸುವ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.


ರಾಜ್ಯದಲ್ಲಿ ಕೋರ್ಟ್ ಮತ್ತು ಕಾನೂನಿನ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ಕೇಂದ್ರ ಕಾನೂನು ಸಚಿವರೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.
ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯಿಂದಾಗಿ ಜಾನುವಾರುಗಳಿಗೆ ಕಾಲು ಬಾಯಿ ರೋಗ ಹೆಚ್ಚಾಗಿದ್ದು, ಲಸಿಕೆಯ ಕೊರತೆ ಇರುವುದನ್ನು ಗಮನಿಸಲಾಗಿದೆ. ಲಸಿಕೆ ಕೊರತೆಯನ್ನು ನೀಗಿಸಿ ಲಸಿಕೆಯನ್ನು ಲಭ್ಯವಾಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

More News