Koppal Gavisiddeshwara Jatre 2025: ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಮೂಲಸೌಕರ್ಯ ಒದಗಿಸುವಂತೆ ಸಚಿವ ಶಿವರಾಜ್ ತಂಗಡಗಿ ಸೂಚನೆ

ಕೊಪ್ಪಳ: ದಕ್ಷಿಣ ಭಾರತದ ಕುಂಭ ಮೇಳ ಎಂದೇ ಪ್ರಸಿದ್ದವಾದ ಶ್ರೀಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಕುಡಿಯುವ ನೀರು, ವಾಹನ ಪಾರ್ಕಿಂಗ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಶ್ರೀಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು, ಶ್ರೀಗವಿಸಿದ್ದೇಶ್ವರ ಮಹಾರಥೋತ್ಸವ ಜ. 15ರಂದು ನಡೆಯಲಿದ್ದು, ರಾಜ್ಯದ ವಿವಿಧ ಭಾಗಗಳಿಂದ ಸುಮಾರು 10 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಉತ್ಸವದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಉತ್ಸವ ವ್ಯವಸ್ಥಿತವಾಗಿ ಜರುಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ವಾಹನಗಳಿಗೆ ಅಗತ್ಯ ಪಾರ್ಕಿಂಗ್ ವ್ಯವಸ್ಥೆ ಜೊತೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕು. ಭಕ್ತಾದಿಗಳಿಗೆ ಅನುಕೂಲವಾಗುವಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು. ರಥೋತ್ಸವ ವೇಳೆ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಾತ್ರೋತ್ಸವ ಹಿನ್ನೆಲೆಯಲ್ಲಿ ನಿರಂತರವಾಗಿ ನಡೆಯಲಿರುವ ದಾಸೋಹಕ್ಕೆ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆಯಾಗದಿರಲಿ. ಶುದ್ಧ ಕುಡಿಯುವ ನೀರು ಸರಬರಾಜು ಜೊತೆಗೆ ಸ್ವಚ್ಛತೆಯನ್ನು ಕಾಪಾಡಲು ನಗರಸಭೆಯಿಂದ ಕ್ರಮ ಕೈಗೊಳ್ಳಬೇಕು. ಜನರ ಆರೋಗ್ಯದ ಹಿತದೃಷ್ಟಿಯಿಂದ ಅಂಬ್ಯುಲೆಂನ್ಸ್ ವ್ಯವಸ್ಥೆ ಹಾಗೂ ಆರೋಗ್ಯ ತಂಡ ಕಾರ್ಯನಿರ್ವಹಿಸಬೇಕು. ಅಗ್ನಿಶಾಮಕ ವಾಹನಗಳನ್ನು ಕಾಯ್ದಿರಿಸಬೇಕು. ಶ್ರೀ ಗವಿಸಿದ್ದೇಶ್ವರ ಜಾತ್ರೆ ಅತ್ಯಂತ ವಿಜೃಂಭಣೆಯಿಂದ ಹಾಗೂ ವ್ಯವಸ್ಥಿತವಾಗಿ ನಡೆಸಲು ರಚಿಸಲ್ಪಟ್ಟ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಇದು ನಮ್ಮೆಲ್ಲರ ಜಾತ್ರೆಯಾಗಿರುವುದರಿಂದ ಸೇವಾ ಮನೋಭಾವದಿಂದ ಕೆಲಸ ಮಾಡಬೇಕು. ವಿಶೇಷಯವಾಗಿ ಜ. 14, 15 ಮತ್ತು 16 ರಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಈ ಮೂರು ದಿನಗಳ ಕಾಲ ಅಧಿಕಾರಿಗಳು ಜಾಗೃತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್.ಎಲ್ ಅರಸಿದ್ದಿ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಕೊಪ್ಪಳ ಡಿವೈಎಸ್ಪಿ ಮುತ್ತಣ್ಣ ಸವರಗೋಳ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್ ಸೇರಿದಂತೆ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬಾಕ್ಸ್
ಗವಿಮಠಕ್ಕೆ ಭೇಟಿ: ಸಭೆಯ ನಂತರ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಶ್ರೀ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಜಾತ್ರಾ ವಿಷಯದ ಕುರಿತು ಶ್ರೀಗಳೊಂದಿಗೆ ಚರ್ಚೆ ನಡೆಸಿದರು.

More News

You cannot copy content of this page