ವೈದ್ಯ ಸೀಟು ಹಂಚಿಕೆ ವಿಳಂಬ ಸುಪ್ರೀಂ ಕೋರ್ಟ್ʼಗೆ ಮೊರೆ ಹೋಗಲು ರಾಜ್ಯ ಸರಕಾರಕ್ಕೆ ಕುಮಾರಸ್ವಾಮಿ ಒತ್ತಾಯ

ಬೆಂಗಳೂರು: ವೈದ್ಯ ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆ ಪ್ರಕ್ರಿಯೆ ನೆನೆಗುದಿಗೆ ಬಿದ್ದಿರುವ ಬಗ್ಗೆ ಕೇಂದ್ರ ಸರಕಾರದ ಮೇಲೆ ತೀವ್ರ ಟೀಕಾ ಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯ ಸರಕಾರ ಕೂಡಲೇ ಸುಪ್ರೀಂ ಕೋರ್ಟ್‌ʼಗೆ ಅರ್ಜಿ ಸಲ್ಲಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಇಂದು ಬೆಳಗ್ಗೆ ಸರಣಿ ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿಗಳು, ವೈದ್ಯ ಸೀಟುಗಳ ಹಂಚಿಕೆ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಸರಕಾರಗಳೇ ಮ್ಯಾನೇಜ್‌ ಮೆಂಟುಗಳಿಗೆ ಅನುಕೂಲ ಮಾಡಿಕೊಡುತ್ತಿವೆ ಎಂದು ದೂರಿದ್ದಾರೆ.
ವೈದ್ಯ ಶಿಕ್ಷಣವನ್ನು ಹಳ್ಳಿ ವಿದ್ಯಾರ್ಥಿಗಳಿಗೆ ʼನೀಟಾಗಿʼ ತಪ್ಪಿಸುವ ಹುನ್ನಾರ ನಡೆಯುತ್ತಿದೆಯಾ? ಎನ್ನುವ ಅನುಮಾನ ಕಾಡುತ್ತಿದೆ. ಕೇಂದ್ರ ಸರಕಾರಕ್ಕೆ ʼನೀಟ್‌ʼ ವ್ಯವಸ್ಥೆಯನ್ನು ಹಾಳು ಮಾಡುವ ಬಗ್ಗೆ ಇದ್ದ ಉತ್ಸಾಹ ಸರಿ ಮಾಡಲು ಇಲ್ಲ ಎನ್ನುವುದು ವಿದ್ಯಾರ್ಥಿಗಳಿಗೆ ಮನವರಿಕೆಯಾಗಿದೆ ಎಂದಿದ್ದಾರೆ.
“ಸಮಾನ ಶಿಕ್ಷಣ, ಸಮಾನ ಅವಕಾಶ”ಗಳ ಸಂವಿಧಾನದ ಆಶಯವನ್ನು ಕೇಂದ್ರ ಸರಕಾರ ಗಾಳಿಗೆ ಬಿಟ್ಟಿದೆ. ನಾಲ್ಕು ತಿಂಗಳಿನಿಂದ ವೈದ್ಯ ಸೀಟುಗಳು ಹಂಚಿಕೆಯಾಗಿಲ್ಲ. ಪರಿಣಾಮ ಎಂಜಿನಿಯರಿಂಗ್‌ ಕೌನ್ಸೆಲಿಂಗ್‌ ಕೂಡ ತಡವಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಸಮರ್ಪಕ ನಿರ್ವಹಣೆ, ಅದಕ್ಷತೆಗೆ ಹಿಡಿದ ಕನ್ನಡಿ ಇದಾಗಿದೆ ಎಂದರು.
ಉನ್ನತ ಶಿಕ್ಷಣ ಉಳ್ಳವರಿಗೆ ಮಾತ್ರವೇ? ಇದೇ ಸತ್ಯ ಎನ್ನುವಂತೆ ಕೇಂದ್ರ ಸರಕಾರ ನಡೆದುಕೊಳ್ಳುತ್ತಿದೆ. ಗುಣಮಟ್ಟದ ಕೋಚಿಂಗ್‌ ಪಡೆಯಲು ಶಕ್ತಿ ಇಲ್ಲದ, ಆರ್ಥಿಕವಾಗಿ ದುರ್ಬಲರಾದ ಗ್ರಾಮೀಣ ವಿದ್ಯಾರ್ಥಿಗಳಿಗೆ ವೈದ್ಯ ಶಿಕ್ಷಣವನ್ನು ಶಾಶ್ವತವಾಗಿ ತಪ್ಪಿಸುವ ದುರಾಲೋಚನೆ ಈ ವಿಳಂಬ ದ್ರೋಹದ ಹಿಂದೆ ಇದೆಯಾ? ಎಂದು ಪ್ರಶ್ನಿಸಿದ್ದಾರೆ.
ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಸರಕಾರಗಳು ಅಸಹಾಯತೆಯ ʼನಾಟಕʼ ಆಡುತ್ತಾ ವಿದ್ಯಾರ್ಥಿ-ಪೋಷಕರನ್ನು ಯಾಮಾರಿಸುತ್ತಿವೆ. ನೀಟ್‌ ವಿಳಂಬದಿಂದ ವೈದ್ಯ, ಎಂಜಿನಿಯರಿಂಗ್‌ ಸೀಟುಗಳ ʼಕಾಳಸಂತೆ ಬಿಕರಿʼಗೆ ಸರಕಾರಗಳೇ ಅವಕಾಶ ಮಾಡಿಕೊಟ್ಟಂತೆ ಆಗಿದೆ. ಇದ್ಯಾವ ಸೀಮೆ ಶಿಕ್ಷಣ ನೀತಿ? ಎಂದು ಕೇಂದ್ರ ಸರ್ಕಾರದ ವಿರುದ್ಧಹರಿಹಾಯ್ದಿದ್ದಾರೆ.
ರಾಜ್ಯ ಸರಕಾರ ಕೂಡಲೇ ಸುಪ್ರೀಂ ಕೋರ್ಟ್‌ʼಗೆ ಮನವಿ ಸಲ್ಲಿಸಿ ತ್ವರಿತ ತೀರ್ಪು ನೀಡುವಂತೆ ಮನವಿ ಮಾಡುವುದು ಸೇರಿ, ಕೇಂದ್ರದ ಮೇಲೆ ಒತ್ತಡ ಹೇರಬೇಕು. ಭಾರತವನ್ನು ʼವಿಶ್ವಗುರುʼ ಮಾಡುವ ಉಮೇದಿನಲ್ಲಿರುವ ಕೇಂದ್ರವು, ಗ್ರಾಮೀಣ ವಿದ್ಯಾರ್ಥಿಗಳ ಹಿತ ಕಾಯಬೇಕಾಗಿದೆ ಎಂದಿದ್ದಾರೆ.
ನೀಟ್‌ ಅವ್ಯವಸ್ಥೆ ಬಗ್ಗೆ ರಾಜ್ಯ ಸರಕಾರವು ನೆರೆ ರಾಜ್ಯಗಳಂತೆ ದನಿಯೆತ್ತಬೇಕು. ಹಾಗೆ ಮಾಡದಿದ್ದರೆ, ಖಾಸಗಿ ವೈದ್ಯ ಕಾಲೇಜುಗಳ ಜತೆ ರಾಜ್ಯ ಸರಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಜನರು ಭಾವಿಸಬೇಕಾಗುತ್ತದೆ ಎಂದು ಟೀಕಿಸಿದ್ದಾರೆ.

More News