ಮಂಡ್ಯ: ಮಂಡ್ಯ ನಗರದಾದ್ಯಂತ ವಿಶೇಷವಾಗಿ ವಿವೇಕಾನಂದ ಬಡಾವಣೆ ಹಾಗೂ ಹೌಸಿಂಗ್ ಬೋರ್ಡ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಕಾಮಗಾರಿಯನ್ನು ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸಿ 24×7 ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಗರಾಭಿವೃದ್ಧಿ ಖಾತೆ ಸಚಿವ ಭೈರತಿ ಬಸವರಾಜ್ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂದಿನ ಒಂದು ತಿಂಗಳೊಳಗಾಗಿ ನಗರದಾದ್ಯಂತ ಅತ್ಯುತ್ತಮ ಗುಣಮಟ್ಟದ ಕುಡಿಯುವ ನೀರು ಪೂರೈಸುವಲ್ಲಿ ಶೀಘ್ರವೇ ಕ್ರಮವಹಿಸುವಂತೆ ನಗರಾಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಮಂಡ್ಯ ನಗರದಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳಲ್ಲಿ ಯಾವುದೇ ತೊಂದರೆಯಾಗದಂತೆ ನಿಗಾವಹಿಸಿ, ರಾಜ್ಯ ಸರ್ಕಾರವು ಮಂಡ್ಯ ನಗರಸಭೆಗೆ 40 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಿದ್ದು, ನಗರದಲ್ಲಿ ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸುವಂತೆ ಹಾಗೂ ನಗರದಲ್ಲಿ ಒಳಚರಂಡಿ ಸೇರಿದಂತೆ ಎಲ್ಲಾ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ಹೊಸ ಬಡಾವಣೆಗಳನ್ನು ನಿರ್ಮಿಸುವಂತೆ ಹಾಗೂ ಹಾಳಾಗಿರುವ ಬಡಾವಣೆಗಳ ಕಾಮಗಾರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕರಾದ ಸಿ.ಎಸ್ ಪುಟ್ಟರಾಜು, ವಿಧಾನ ಪರಿಷತ್ ಸದಸ್ಯರಾದ ಕೆ.ಟಿ ಶ್ರೀಕಂಠೇಗೌಡ, ಅಪರ ಜಿಲ್ಲಾಧಿಕಾರಿ ವಿ.ಆರ್ ಶೈಲಜಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿವ್ಯಪ್ರಭು, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಭಾರ ಅಯುಕ್ತರು ಆದ ಪಾಂಡವಪುರ ಉಪವಿಭಾಗಾಧಿಕಾರಿ ಐಶ್ವರ್ಯ, ನಗರಸಭೆ ಆಯುಕ್ತರು ಎಸ್. ಲೋಕೇಶ್, ನಗರಸಭೆ ಅಧ್ಯಕ್ಷ ಹೆಚ್.ಎಸ್ ಮಂಜು, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದೊರೆಸ್ವಾಮಿ ಮತ್ತು ಅಧಿಕಾರಿ ವರ್ಗದವರು ಮತ್ತಿತರರು ಉಪಸ್ಥಿತರಿದ್ದರು.




